State news

ಖಾಲಿ ಟ್ರಂಕ್‌ನೊಂದಿಗೆ ತೇಜಸ್ವಿ ಸೂರ್ಯ ಪ್ರತಿಭಟಿಸಲು ಮುಂದಾಗಿ ಪೊಲೀಸರು ವಶ..!

ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರದ ಕುಮ್ಮಕ್ಕಿದೆ, ಖಜಾನೆ ಖಾಲಿಯಾಗಿ ದಿವಾಳಿಯಾಗಿದೆ ಎಂದು ಆರೋಪಿಸಿ ನ್ಯಾಷನಲ್ ಕಾಲೇಜು ಮೆಟ್ರೊ ಬಳಿ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಪೊಲೀಸ್ ಅಧಿಕಾರಿಗಳು ಸೂರ್ಯ ಅವರನ್ನು ಪೊಲೀಸ್ ವಾಹನದಲ್ಲಿ ಕೂರಿಸಿ ಠಾಣೆಗೆ ಕರೆದೊಯ್ದರು.ಮೆಟ್ರೊ ಬಳಿ ಪ್ರತಿಭಟನೆ ನಡೆಸಲು ಅವಕಾಶ ಇಲ್ಲ ಎಂದು ಪೊಲೀಸರು ಅವರನ್ನು ತಡೆದಿದ್ದಾರೆ. ಖಾಲಿ ಟ್ರಂಕ್‌ನೊಂದಿಗೆ ತೇಜಸ್ವಿ ಸೂರ್ಯ ಪ್ರತಿಭಟಿಸಲು ಮುಂದಾಗಿದ್ದರು.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ, “ಇದು ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ನೀತಿ!! ​ಕರ್ನಾಟಕ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ ಎಂದು ಖಾಲಿ ಟ್ರಂಕ್ ತೋರಿಸಿ ಪ್ರತಿಭಟನೆ ಮಾಡುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ಬಂಧಿಸಿರುವುದು ಅತ್ಯಂತ ಖಂಡನೀಯ. ​ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿಎಂ ಸಿದ್ದರಾಮಯ್ಯ ಅವರೇ ಕರ್ನಾಟಕದಲ್ಲಿ ಸಂಸದರಿಗೆ ಪ್ರತಿಭಟಿಸುವ ಹಕ್ಕು ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಇಂದಿನಿಂದ ನಮ್ಮ ಮೆಟ್ರೊ ಪ‍್ರಯಾಣ ದರ ಶೇ 5 ರಷ್ಟು ಹೆಚ್ಚಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರದ ಮಧ್ಯಪ್ರವೇಶದಿಂದ ತಾತ್ಕಾಲಿಕ ತಡೆ ನೀಡಲಾಗಿದೆ.

ತಮ್ಮ ಬಂಧನದ ಬಳಿಕ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, “ಉತ್ತಮ ರಸ್ತೆ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬದಲು ಸರ್ಕಾರ ಪ್ರತಿಭಟನಾಕಾರರನ್ನು ಬಂಧಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಾರ್ವಜನಿಕ ಸಾರಿಗೆಯು ಸಾಮಾನ್ಯ ಜನರಿಗೆ ಕೈಗೆಟುಕುವ ದರದಲ್ಲಿರಬೇಕು ಎಂಬುದು ನಮ್ಮ ಆಗ್ರಹವಾಗಿದೆ’ ಎಂದು ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಸದ ತೇಜಸ್ವಿ ಸೂರ್ಯ ಅವರ ನಿರಂತರ ಒತ್ತಡದ ಬೆನ್ನಲ್ಲೇ, ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟ‌ರ್ ಅವರು ಮೆಟ್ರೋ ದರ ಏರಿಕೆಯನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದಾಗ್ಯೂ, ರಾಜ್ಯ ಸರ್ಕಾರದ ಧೋರಣೆ ವಿರುದ್ಧ ಬಿಜೆಪಿ ತನ್ನ ಹೋರಾಟವನ್ನು ಮುಂದುವರಿಸಲು ನಿರ್ಧರಿಸಿದೆ.

Leave a Reply

Your email address will not be published. Required fields are marked *

Back to top button