State news

ಮಹಿಳಾ ಅಧಿಕಾರಿ ಮನೆಯ ಬಲ್ಬ್ ಹೋಲ್ಡರ್‌ಗಳಲ್ಲಿ 8 ರಹಸ್ಯ ಕ್ಯಾಮರಾ: ಸರ್ಕಾರಿ ಅಧಿಕಾರಿ ಬಂಧನ

ಬೆಳಗಾವಿ: ಮಹಿಳಾ ಅಧಿಕಾರಿಯ ಮನೆಯಲ್ಲಿ ಬಲ್ಬ್ ಹೋಲ್ಡರ್‌ಗಳಲ್ಲಿ ಹಿಡನ್ (ರಹಸ್ಯ) ಕ್ಯಾಮರಾ ಅಳವಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳಾ ಅಧಿಕಾರಿಯ ಖಾಸಗಿ ದೃಶ್ಯಗಳನ್ನು ಸಂಗ್ರಹಿಸುವ ಉದ್ದೇಶದಿಂದ ಮನೆಯ ಬಲ್ಬ್ ಹೋಲ್ಡರ್‌ಗಳಲ್ಲಿ ಒಟ್ಟು ಎಂಟು ಹಿಡನ್ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಈ ದೃಶ್ಯಗಳನ್ನು ಬಳಸಿಕೊಂಡು ನಕಲಿ ಪತ್ರಕರ್ತರ ಮೂಲಕ ಬ್ಲ್ಯಾಕ್‌ಮೇಲ್‌ ಮಾಡುವ ಯತ್ನ ನಡೆದಿದ್ದು, ಅದರಿಂದ ಬಂದ ಹಣವನ್ನು ಆರೋಪಿಗಳು ಹಂಚಿಕೊಳ್ಳುವ ಉದ್ದೇಶ ಹೊಂದಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ವಿನೋದ್ ಟಿ ಎಂಬ ಸರ್ಕಾರಿ ಅಧಿಕಾರಿಯನ್ನು ಬಂಧಿಸಲಾಗಿದೆ.

ಆರೋಪಿಯ ಮೊಬೈಲ್‌ ಫೋನ್‌ಗಳನ್ನು ವಶಕ್ಕೆ ಪಡೆದು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮಹಿಳಾ ಅಧಿಕಾರಿಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತೊಬ್ಬ ಅಧಿಕಾರಿಯನ್ನೂ ವಶಕ್ಕೆ ಪಡೆಯಲಾಗಿದೆ.

ಬ್ಲ್ಯಾಕ್‌ಮೇಲ್ ಮೂಲಕ ಬಂದ ಹಣದಲ್ಲಿ ಮನೆ ಕಟ್ಟುವ ಯೋಜನೆಯೂ ಇದ್ದುದಾಗಿ ತನಿಖೆಯಲ್ಲಿ ಬಹಿರಂಗವಾಗಿದ್ದು, ಬಂಧಿತ ಆರೋಪಿ ವಿನೋದ್ ಟಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವೃತ್ತಿ ವೈಷಮ್ಯದ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿಯ ತೇಜೋವಧೆ ಮಾಡುವ ಉದ್ದೇಶದಿಂದ ಈ ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳಾ ಅಧಿಕಾರಿಯ ವರ್ಗಾವಣೆಗೆ ಕಾರಣರಾದ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳಲು ಆರೋಪಿಯು ಅಡ್ಡಮಾರ್ಗ ಹಿಡಿದಿದ್ದಾನೆ ಎನ್ನಲಾಗಿದೆ.

Leave a Reply

Your email address will not be published. Required fields are marked *

Back to top button