ಕೊಪ್ಪಳ ಸುದ್ದಿ

ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಲು ಆಯೋಗ ಸದಾ ಸಿದ್ದ: ಡಾ. ನಾಗಲಕ್ಷ್ಮೀ ಚೌಧರಿ

ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಲು ಆಯೋಗ ಸದಾ ಸಿದ್ದ: ಡಾ. ನಾಗಲಕ್ಷ್ಮೀ ಚೌಧರಿ

ಕೊಪ್ಪಳ ಫೆಬ್ರವರಿ 07, : ಮಹಿಳೆಯರಿಗೆ ಸಂಬAಧಿಸಿದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮಹಿಳಾ ಆಯೋಗವು ಸದಾ ಸಿದ್ದವಾಗಿದ್ದು, ಮಹಿಳೆಯರ ರಕ್ಷಣೆಗೆ ಹಾಗೂ ಮಹಿಳೆಯರಿಗೆ ಕಾನೂನಾತ್ಮಕ ನೆರವು ನೀಡಲು ಬದ್ಧವಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಹೇಳಿದರು.

ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಹಮ್ಮಿಕೊಂಡಿದ್ದ ಪ್ರವಾಸ ಕಾರ್ಯಕ್ರಮದಲ್ಲಿ ಗಮನಿಸಿದ ಅಂಶಗಳು, ಸಮಸ್ಯೆಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಲು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ 10ಕ್ಕಿಂತ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚಿಸಲು ಸೂಚಿಸಲಾಗಿದೆ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷತೆಯ ವಾತಾವರಣ ನಿರ್ಮಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕುವಂತೆ ಅಬಕಾರಿ ಇಲಾಖೆಗೆ ಸೂಚಿಸಲಾಗಿದೆ. ನಗರದ ಸಿದ್ದೇಶ್ವರ ನಗರದಲ್ಲಿನ ಅಲೆಮಾರಿ ಜನಾಂಗ ಭೇಟಿ ಮಾಡಿದ್ದು, ಅವರಿಗೆ ನಗರಸಭೆಯಿಂದ ಅಗತ್ಯ ಸೌಕರ್ಯ ಒದಗಿಸಲಾಗಿದೆ. ಆ ಪ್ರದೇಶದಲ್ಲಿನ ವಿದ್ಯುತ್ ಕಂಬ ದುರಸ್ಥಿಗೊಳಿಸಲಾಗಿದೆ. ಆದರೆ ಅಲ್ಲಿನ ಅಂಗನವಾಡಿ ಪಕ್ಕದಲ್ಲಿಯೇ ರೈಲು ಹಳಿ ಇರುವುದರಿಂದ ಪೋಷಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದು, ಸುಮಾರು 3 ಕಿ.ಮೀ ವ್ಯಾಪ್ತಿಯಲ್ಲಿ ಸುರಕ್ಷಾ ಫೆನ್ಸಿಂಗ್ ಅಳವಡಿಸಲು ಸೂಚನೆ ನೀಡಿದ್ದೇನೆ ಎಂದು ಅವರು ಮಾಹಿತಿ ನೀಡಿದರು.

ಎಲ್ಲ ವಿದ್ಯಾರ್ಥಿ/ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಬೇಕು. ಗುಣಮಟ್ಟದ ಆಹಾರ ನೀಡಬೇಕು. ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸರ್ಕಾರಿ ಯೋಜನೆ, ಸೌಲಭ್ಯಗಳ ಬಗ್ಗೆ ಈ ಭಾಗದ ಜನರಿಗೆ ಇನ್ನೂ ಹೆಚ್ಚಿನ ಜಾಗೃತಿಯ ಅವಶ್ಯಕತೆ ಇದೆ. ಸರ್ಕಾರಿ ಸೌಲಭ್ಯವನ್ನು ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದರೂ, ಸೌಲಭ್ಯಗಳನ್ನು ಹೇಗೆ ಪಡೆಯಬೇಕು ಎಂಬ ಬಗ್ಗೆ ಸಾರ್ವಜನಿಕರಿಗೂ ಅರಿವಿರಬೇಕು. ಪ್ರತಿ ಹಳ್ಳಿಯಲ್ಲಿಯೂ ಮಹಿಳಾ ಗ್ರಾಮಸಭೆಯನ್ನು ಕಡ್ಡಾಯವಾಗಿ ನಡೆಸಿ, ಮಹಿಳೆಯರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.

ಜಿಲ್ಲೆಯ ತಾಯಿ ಮತ್ತು ಮಗುವಿನ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಸೌಕರ್ಯಗಳನ್ನು, ಗುಣಮಟ್ಟದ ಆಹಾರವನ್ನು ನೀಡುತ್ತಿರುವುದು ಪ್ರಶಂಸನೀಯ. ಕಾರಟಗಿ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಿದಾರ್ಥಿನಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ್ದು, ಅಲ್ಲಿ ಉತ್ತಮ ಸೌಕರ್ಯಗಳನ್ನು ವಿದ್ಯಾರ್ಥಿನಿಯರಿಗೆ ಒದಗಿಸಲಾಗಿದೆ. ಜಿಲ್ಲೆಯ ಎಲ್ಲ ವಸತಿ ನಿಲಯಗಳಲ್ಲಿಯೂ ಇಂತಹ ವ್ಯವಸ್ಥೆಗಳನ್ನು ಒದಗಿಸಬೇಕು. ನರೇಗಾ ಕಾರ್ಯಕ್ರಮದಡಿ ಶೇ.50 ರಷ್ಟು ಜಾಬ್‌ಕಾರ್ಡ್ಗಳನ್ನು ಮಹಿಳೆಯರಿಗೆ ನೀಡಬೇಕು. ಹೆಚ್ಚಿನ ಉದ್ಯೋಗದಿನಗಳನ್ನು ಒದಗಿಸಬೇಕು ಎಂದು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭ, ಡಿವೈಎಸ್‌ಪಿ ಮುತ್ತಣ್ಣ ಸವರಗೋಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ ಸೇರಿದಂತೆ ಪತ್ರಿಕಾ ಮಾಧ್ಯಮದವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button